ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಲಿದೆ.
ಕಳೆದ ಜುಲೈ 26 ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿ ಇದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದರು. ಅದರಂತೆ ಆಗಿನ ಸಿಎಂ ಬೊಮ್ಮಾಯಿ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ಸೆ.22ರಂದು ಆದೇಶ ಹೊರಡಿಸಲಾಗಿತ್ತು., ಆದರೆ ಅವರ ವಿನಂತಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಕೆಳೆದ ಅಕ್ಟೋಬರ್ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.
ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ಇದೀಗ ಸರಕಾರ ಬದಲಾಗಿದ್ದು, ನೂತನ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ವರದಿಯಾಗಿದೆ.
‘ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ತಮ್ಮನ್ನು ಮುಂದುವರೆಸಲು ನೂತನಕುಮಾರಿ ಅವರು ಕೋರಿದರೆ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.