ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಅಲ್ಲಿನ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿದ್ದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಇಂದು ಉಡುಪಿ ತಾಲೂಕು ಆಫೀಸ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
ಸುರತ್ಕಲ್ ಟೋಲ್ ಅನ್ನು ಹೆಜಮಾಡಿ ಟೋಲ್ ಗೆ ವಿಲೀನಗೊಳಿಸಿರುವುದು ಅವೈಜ್ಞಾನಿಕ. ಇದರ ಬಗ್ಗೆ ರಾಜ್ಯ ಮಟ್ಟದಲ್ಲಿ ಸರ್ಕಾರದ ಹಂತದಲ್ಲಿ ಸಭೆ ನಡೆಸಿ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸುರತ್ಕಲ್ ಟೋಲ್ ನಲ್ಲಿ ಸಾರ್ವಜನಿಕ ವಾಹನಗಳಿಗೆ ನೀಡಲಾದ ರಿಯಾಯಿತಿ ಸೌಲಭ್ಯವನ್ನು ಯಥವತ್ತಾಗಿ ಹೆಜಮಾಡಿ ಟೋಲಿಗೆ ಅನುಷ್ಠಾನಗೊಳಿಸುವಂತೆ ನಿರ್ಧರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿಗಳಾದ ವೀಣಾ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.