ಉಡುಪಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಇದೇ ಬರುವ ಡಿ. 25ರಂದು ಸಂಜೆ 4ಗಂಟೆಗೆ ಉಡುಪಿ ಎಂಜಿಎಂ ಮೈದಾನದಲ್ಲಿ ಬೂತ್ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಉಡುಪಿ ಎಂಜಿಎಂ ಮೈದಾನದಲ್ಲಿಂದು ಮಾತನಾಡಿದ ಅವರು, ಬೂತ್ ಸಂಗಮ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆ ವಿಶಿಷ್ಟ ರೀತಿಯಲ್ಲಿ ನಡೆಯಲಿದ್ದು, 226 ಬೂತ್ ಗಳ ಪೈಕಿ ಐದು ಬೂತ್ ಗಳ ಅಧ್ಯಕ್ಷರನ್ನು ಚೀಟಿ ಎತ್ತುವ ಮೂಲಕ ಉದ್ಘಾಟನೆಗೆ ಆಯ್ಕೆ ಮಾಡಲಾಗುತ್ತದೆ ಎಂದರು.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 226 ಬೂತ್ ಗಳಿದ್ದು, ಪ್ರತಿ ಬೂತ್ ನಿಂದ 100 ಮಂದಿಯನ್ನು ಕರೆತರುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಹಾಗಾಗಿ 25 ಸಾವಿರಕ್ಕಿಂತಲೂ ಹೆಚ್ಚು ಜನರು ಬೂತ್ ಸಂಗಮದಲ್ಲಿ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.