ಉಡುಪಿ: ಕೋವಿಡ್ 4ನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮುಂಜಾಗ್ರತೆ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ.
18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ದಾಟಿದವರು ಹಾಗೂ 15ರಿಂದ 17 ವರ್ಷ ಪ್ರಾಯದ ಶಾಲಾ ಮಕ್ಕಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇದ್ದಲ್ಲಿ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬಹುದಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದ್ದು, ಕೊವಿಶೀಲ್ಡ್ ಲಭ್ಯವಿರುವುದಿಲ್ಲ. ಕೊವಿಶೀಲ್ಡ್ ಲಸಿಕೆಯು ಜಿಲ್ಲೆಗೆ ಸರಬರಾಜಾದ ತತ್ಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ, ರಾಜ್ಯ ಸರಕಾರದ ಮಾರ್ಗಸೂಚಿಯೇ ಅನ್ವಯ
ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡಲಾಗುವುದು. ಮಾಸ್ಕ್ ಧರಿಸುವುದು, ಅಂತರ ಕಾಪಾಡಿಕೊಳ್ಳುವುದು, ಕಾರ್ಯಕ್ರಮ ಆಯೋಜನೆ ಇತ್ಯಾದಿಗಳ ಕುರಿತು ರಾಜ್ಯ ಸರಕಾರ ಸೋಮವಾರ ಹೊರಡಿಸುವ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಪಾಲಿಸಲಾಗುತ್ತದೆ. ಡಿ. 31ರ ವಾರ್ಷಾಂತ್ಯದ ಸಂಭ್ರಮ ಆಚರಣೆಗೆ ವಿಧಿಸಬಹುದಾದ ನಿರ್ಬಂಧ ಮತ್ತು ಕಾರ್ಯಕ್ರಮ ಹೇಗೆ ನಡೆಸಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಮಾರ್ಗಸೂಚಿ ನೀಡಲು ಒಂದೆರಡು ದಿನಗಳಲ್ಲಿ ಅಧಿಕಾರಿಗಳು ಹಾಗೂ ವಿವಿಧ ಸ್ಟೇಕ್ ಹೋಲ್ಡರ್ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮಾಹಿತಿ ನೀಡಿದರು.