ಉಡುಪಿ: ಅತೀವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018 ಮೇ 28 ರಂದು ದೀಪ್ರಾಜ್ ನಾಯ್ಕ್ ಎಂಬಾತನು ಕೊಕ್ಕರ್ಣೆ ಯಿಂದ ಮುದ್ದೂರು ಕಡೆಗೆ ಹೋಗುವಾಗ ತನ್ನ ಬೈಕನ್ನು ಅತೀವೇಗ ಹಾಗೂ ಅಜಾಕರೂಕತೆಯಿಂದ ಚಲಾಯಿಸಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಾಕು ಪೂಜಾರ್ತಿ ಎಂಬ ಮಹಿಳೆಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದನು. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸಾಕು ಪೂಜಾರ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಹೆಬ್ರಿ ಪೊಲೀಸ್ ಠಾಣೆ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿ ದೀಪ್ರಾಜ್ ನಾಯ್ಕ್ 6 ತಿಂಗಳ ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿರುತ್ತಾರೆ.
ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ.ಕೆ. ವಾದ ಮಂಡಿಸಿದ್ದಾರೆ.