ಉಡುಪಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ)ವು 224 ವಿಧಾನಸಭೆ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, 50ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಕಾರ ರಚನೆಯಲ್ಲಿ ಕಿಂಗ್ ಮೇಕರ್ ಆಗಲಿದೆ ಎಂದು ಕೆಜೆಪಿ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಭವಿಷ್ಯ ನುಡಿದರು.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಬೇಸತ್ತು ಹೋಗಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಕೆಜೆಪಿ ಸಂಕಲ್ಪ ಮಾಡಿದೆ. ನ್ಯಾಯಸಮ್ಮತ ಆಡಳಿತ ನೀಡಲು ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷವೊಂದರ ಅವಶ್ಯಕತೆ ಇದೆ. ರಾಜ್ಯದ ಜನತೆ ಈ ಬಾರಿ ಕೆಜೆಪಿ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂದರು.
ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಪ್ರಭಾವಿ ವ್ಯಕ್ತಿಗಳು ಪಕ್ಷದ ಚಿನ್ನೆಯಡಿ ಸ್ಪರ್ಧಿಸಲು ಉತ್ಸಾಹ ತೋರಿದ್ದು, ಕೆಲವೇ ದಿನಗಳಲ್ಲಿ ಅವರ ಹೆಸರುಗಳನ್ನು ಬಹಿರಂಗ ಪಡಿಸುತ್ತೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೆಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಿರ್ಮಲಾ ರಾಜ್ ಕುಮಾರ್, ಉಡುಪಿ ಸಂಚಾಲಕ ದೊರೆಸ್ವಾಮಿ, ಪುಟ್ಟ ಸ್ವಾಮಿ, ವೆಳನ್ ಉಪಸ್ಥಿತರಿದ್ದರು.