ಕಾರವಾರ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದವರು ಮಾರ್ಚ್ 1ರಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಮಸ್ಯೆಯನ್ನು ಪರಿಹಾರ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಂದವಾಳದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸುವುದರಿಂದ ಸಹಜವಾಗಿಯೇ ಸಮಸ್ಯೆಗಳು ಸೃಷ್ಟಿಯಾಗಲಿವೆ. ಅದೆಲ್ಲವನ್ನು ನಿಭಾಯಿಸಿಕೊಂಡು ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದರು.
ಕುಮಟಾದ ಹೃದಯ ಭಾಗದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದೇವೆ. ಈ ವಿಷಯದ ಬಗ್ಗೆ ಖಚಿತತೆ ಇರಲಿ ಎನ್ನುವ ಕಾರಣಕ್ಕೆ ಬಜೆಟ್ನಲ್ಲಿ ಘೋಷಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಎಂದು ಪೂಜಾರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸೋದೆ ಸದಾಶಿವರ ರಾಯರು ಪ್ರಥಮ ಬಾರಿಗೆ ಬ್ರಿಟಿಷ ಧ್ವಜವನ್ನು ಕೆಳಗಿಳಿಸಿದ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಾಸಕಿ ರೂಪಾಲಿ ನಾಯ್ಕ ಮತ್ತು ಸಂಸದ ಅನಂತಕುಮಾರ ಹೆಗಡೆ ಈ ಸಂದರ್ಭಕ್ಕೆ ಹೊಸ ಆಯಾಮ ಕೊಡುವ ಮೂಲಕ ಬಹಳ ಅರ್ಥಪೂರ್ಣವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.