ಶಿವಮೊಗ್ಗ, ಆ.16: ವೀರ ಸಾವರ್ಕರ್ ಭಾವಚಿತ್ರ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚಾಕು ಇರಿದಿದ್ದ ಪ್ರಕರಣದಲ್ಲಿ ಪಿಎಫ್‍ಐ ಸಂಘಟನೆ ಕಾರ್ಯಕರ್ತರ ಕೈವಾಡವಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಸದ್ಯ ಜಿಲ್ಲೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದರು.
ಚಾಕು ಇರಿತಕ್ಕೊಳಗಾದ ಪ್ರೇಮ್ ಸಿಂಗ್ ಪ್ರಾಣಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿರುವುದು ಪಿಎಫ್‍ಐ ಸಂಘಟನೆ ಕಾರ್ಯಕರ್ತರು ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಯಾರೇ ಆಗಲಿ ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.