ಮೈಸೂರು: ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ಮೈಸೂರು ಜಿಲ್ಲೆಯಲ್ಲಿ ಐಎಸ್ಐ ಪರವಾನಗಿ ಮತ್ತು ಎಫ್ ಎಸ್ ಎಸ್ ಎ ಪರವಾನಗಿ ಪಡೆಯದೇ ಪ್ಯಾಕೇಜ್ ಕುಡಿಯುವ ನೀರಿನ ವ್ಯಾಪಾರ ವಹಿವಾಟು ನಡೆಸುತ್ತಿರುವ ಕುರಿತು ಸಾಕಷ್ಟು ದೂರುಗಳು ಬಂದಿದ್ದು, ಅಂತಹ ಪ್ಯಾಕೇಜ್ ಕುಡಿಯುವ ನೀರಿನ ಘಟಕಗಳನ್ನು ಮುಚ್ಚಿಸಲು ಜಿಲ್ಲಾ ತನಿಖಾ ದಳವನ್ನು ರಚಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಿ.ರಂದೀಪ್ ಮಾತನಾಡಿ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕವು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಪರವಾನಗಿ ಪಡೆಯದೇ ನೀರಿನ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಐಎಸ್ಐ ಮತ್ತು ಎಫ್ ಎಸ್ ಎಸ್ ಎ ನಿಯಮಾನುಸಾರ ಸ್ವಚ್ಛತೆ ಮತ್ತು ನೀರಿನ ಗುಣಮಟ್ಟ ಕಾಯ್ದುಕೊಂಡು ವಹಿವಾಟು ನಡೆಸುವುದು ಕಡ್ಡಾಯವಾಗಿರುತ್ತದೆ ಎಂದರು. ಎಲ್ಲ ಪ್ಯಾಕೆಜ್ಡ್ ಕುಡಿಯುವ ನೀರಿನ ಘಟಕಗಳ ಮಾಲಿಕರು ನೀರಿನ ಗುಣಮಟ್ಟವನ್ನು ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟು ನಡೆಸಿದಲ್ಲಿ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕರು ಐಎಸ್ಐ ಪರವಾನಗಿ ಇಲ್ಲದ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳು ಕಂಡು ಬಂದಲ್ಲಿ ಮಾರಾಟವನ್ನು ತಡೆಗಟ್ಟುವ ತನಿಖಾದಳದ ಅಧ್ಯಕ್ಷರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಹೆಚ್.ಎನ್.ಸತೀಶ್, ಮಹಾನಗರಪಾಲಿಕೆ ಆಯುಕ್ತ ಜೆ.ಜಗದೀಶ್, ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು.