ಮೈಸೂರು: ಜಿಲ್ಲಾಡಳಿತದ ವತಿಯಿಂದ ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಬನ್ನಿಮಂಟಪದಲ್ಲಿ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಿಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ಮಾತನಾಡಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಲು ಅಧಿಕಾರಿಗಳನ್ನೊಳಗೊಂಡ ಪೆರೇಡ್, ಸಾಂಸ್ಕೃತಿಕ, ಸಾರಿಗೆ, ಸ್ವಾಗತ ಹಾಗೂ ಸ್ವಚ್ಛತಾ ಉಪಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ವಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರು ಜನವರಿ 26 ರಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡುವರು. ಧ್ವಜಾರೋಹಣ ಕಾರ್ಯಕ್ರಮದ ನಂತರ ಪೊಲೀಸ್, ಎನ್.ಸಿ.ಸಿ., ಗೃಹರಕ್ಷಕ ದಳ,ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪೆರೇಡ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಹೇಳಿದರು.
ಬನ್ನಿಮಂಟಪ ಹಾಗೂ ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉತ್ತಮ ಹಾಗೂ ಆಕರ್ಷಕವಾಗಿ ಆಯೋಜಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳನ್ನು ಆಯ್ಕೆ ಮಾಡಿ ತರಬೇತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಪ್ಲಾಸ್ಟಿಕ್ ರಾಷ್ಟ್ರಧ್ವಜ ನಿಷೇಧ: ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ವಿಶ್ವವಿದ್ಯಾನಿಲಯ, ಕಾಲೇಜು ಶಿಕ್ಷಣ ಇಲಾಖೆ, ಪಿ.ಯು ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಸದಂತೆ ತಿಳಿಸಬೇಕು. ವ್ಯಾಪಾರಸ್ಥರು ಸಹ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜ ಮಾರಾಟ ಮಾಡಬಾರದು. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳಿಗೆ ತಿಳಿಸಿದ ಅವರು ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಉಪಯೋಗಿಸದೇ ಎಲ್ಲರೂ ಬಟ್ಟೆಯ ಧ್ವಜವನ್ನು ಬಳಸಬೇಕೆಂದು ಹೇಳಿದರು.
ಹಾಜರಾತಿ ಕಡ್ಡಾಯ: ಸರ್ಕಾರದ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ನಂತರ ಬನ್ನಿಮಂಟಪ ಮೈದಾನದಲ್ಲಿ ನಡೆಯುವ ಮುಖ್ಯ ಸಮಾರಂಭದಲ್ಲಿ ತಪ್ಪದೇ ಹಾಜರಾಗಿ ಬನ್ನಿಮಂಟಪದಲ್ಲಿ ತೆರೆಯಲಾಗುವ ತಾತ್ಕಾಲಿಕ ಹಾಜರಾತಿ ಕಚೇರಿಯಲ್ಲಿ ಹಾಜರಾತಿ ನೀಡುವುದು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೆಂಕಟೇಶ್, ಮೈಸೂರು ನಗರ ಪೊಲೀಸ್ ಉಪ ಆಯುಕ್ತ ಡಾ. ಹೆಚ್.ಟಿ. ಶೇಖರ್, ಉಪವಿಭಾಗಾಧಿಕಾರಿ ಸಿ.ಎಲ್. ಆನಂದ್, ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ಸಿ. ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಚನ್ನಪ್ಪ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.