ಮೈಸೂರು: ನಗರದಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಹೈಟೆಕ್ ಗೊಳಿಸುವ ಕುರಿತಂತೆ ಕೇಂದ್ರ ಸರ್ಕಾರದೊಂದಿಗೆ ಮಾತನಾಡಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಮೈಸೂರಿನ ಮೇಟಗಳ್ಳಿಯಲ್ಲಿರುವ ಇಎಸ್ಐ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಪ್ರತಾಪ್ ಸಿಂಹ ನವೀಕರಿಸಲಾಗುತ್ತಿರುವ ಆಸ್ಪತ್ರೆಯ ಕಟ್ಟಡ ಮತ್ತು ಆಸ್ಪತ್ರೆಗಳಿಗೆ ಅಳವಡಿಸಲಾಗಿರುವ ಯಂತ್ರೋಪಕರಣಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಆಸ್ಪತ್ರೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಯತ್ತತೆಯಲ್ಲಿ ನಡೆಸಲಾಗುತ್ತಿರುವ ವಿವಿಧ ಕೈಗಾರಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದೆ ಎಂದರು.
ಕೈಗಾರಿಕೆಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಮಿಕರು ಪ್ರತಿ ತಿಂಗಳು ತಮ್ಮ ವೇತನದಿಂದ ಇಎಸ್ಐ ಬಾಬ್ತು ಮೊತ್ತವನ್ನು ಪಾವತಿಸುತ್ತಿದ್ದು, ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಲ್ಲಿ ಅವರು ಈ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುವ ಅವಕಾಶವಿದೆ. ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ದೊರೆಯುತ್ತದೆ ಎಂಬ ನಂಬಿಕೆ ಇದೆ ಎಂದರು.
ಇಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಕಾರ್ಮಿಕರು ಬಯಸುತ್ತಾರೆ. ಆದ ಕಾರಣ ಇಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ನಮ್ಮ ಮೇಲಿಟ್ಟಿರುವ ನಂಬಿಕೆಯನ್ನು ಹುಸಿಗೊಳಿಸದಂತೆ ತಮ್ಮ ಪಾಲಿನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ಶೀಘ್ರದಲ್ಲೇ ಆಸ್ಪತ್ರೆಯ ನವೀಕರಣ ಕಾಮಗಾರಿ ಮುಗಿಯುವ ಹಂತದಲ್ಲಿದ್ದು ಅದನ್ನು ಕಾರ್ಮಿಕರ ಸೇವೆಗಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಇಎಸ್ಐ ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯರು ಉಪಸ್ಥಿತರಿದ್ದರು.