ಮೈಸೂರು: ವಿಶೇಷ ಘಟಕ ಯೋಜನೆ ಹಾಗೂ ಬುಡಕಟ್ಟು ಉಪಯೋಜನೆ ಅನುದಾನವನ್ನು ಶೇ. 100% ರಷ್ಟು ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ರಂದೀಪ್ ಡಿ. ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಬುಡಕಟ್ಟು ಉಪಯೋಜನೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಫೆಬ್ರವರಿ ಅಂತ್ಯದ ವೇಳೆಗೆ ವಿಶೇಷ ಘಟಕ ಯೋಜನೆಯಡಿ ಶೇ. 75% ರಷ್ಟು ಹಾಗೂ ಬುಡಕಟ್ಟು ಉಪಯೋಜನೆಯಡಿ ಶೇ. 77% ರಷ್ಟು ಆರ್ಥಿಕ ಪ್ರಗತಿ ಆಗಿರುತ್ತದೆ. 2016-17ನೇ ಸಾಲಿನಲ್ಲಿ ಒಟ್ಟು 295 ಕೋಟಿ ಅನುದಾನ ಈವರೆಗೆ ಬಿಡುಗಡೆಯಾಗಿದ್ದು, 224 ಕೋಟಿ ಖರ್ಚಾಗಿದ್ದು, ಬಿಡುಗಡೆಯಾಗಿರುವ ಅನುದಾನವನ್ನು ಈ ವರ್ಷವೇ ಸಂಪೂರ್ಣ ಖರ್ಚು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಚೆಸ್ಕಾಂ, ಸಣ್ಣ ನೀರಾವರಿ, ಲೋಕೋಪಯೋಗಿ ಇಲಾಖೆ, ಜವಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಮುಂತಾದ ಇಲಾಖೆಗಳ ಅಧಿಕಾರಿಗಳು ಬಹುತೇಕ ಪ್ರಗತಿ ಆಗಿದ್ದು, ಮಾರ್ಚ್ ಅಂತ್ಯದ ವೇಳೆಗೆ ಶೇ 100% ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮಾಡಲಾಗುವ ಈ ಕಾರ್ಯಕ್ರಮಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಗೊಳಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಾರ್ಷಿಕ ಗೌಪ್ಯ ವರದಿಯಲ್ಲಿ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ. ಶಿವಶಂಕರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರಭಾ, ಜಿಲ್ಲಾ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಶಿವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಆರ್. ಬಸಪ್ಪ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.