ಮೈಸೂರು: ಕೆಆರ್ ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದು ಮಂಡ್ಯ ವ್ಯಾಪ್ತಿಯ ರೈತರನ್ನು ಕೆರಳಿಸಿದ್ದು, ಬೀದಿಗೆ ಬಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಲಾಶಯಕ್ಕೆ ಬಿಗಿಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈಗಷ್ಟೇ ಕೊಡಗಿನಲ್ಲಿ ಮಳೆಯಾಗುತ್ತಿದ್ದು, ಜಲಾಶಯದ ನೀರಿನ ಮಟ್ಟದಲ್ಲಿ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಹೀಗಿರುವಾಗ ದಿಢೀರ್ ನೀರು ಬಿಟ್ಟಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ನಾಲ್ಕು ದಿನಗಳಿಂದ 17 ಸಾವಿರ ಕ್ಯೂಸೆಕ್ ನೀರು ಹರಿದುಬಂದು ಅಣೆಕಟ್ಟೆಯು 71ಅಡಿ ತಲುಪಿತ್ತು. ಆಗಲೇ 2500 ಕ್ಯೂಸೆಕ್ ನೀರನ್ನು ಬಿಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ ಅಲ್ಲದೆ ಇದನ್ನು ಖಂಡಿಸಿ ರೈತ ಸಂಘ ಹಾಗೂ ಕನ್ನಡಪರ ಸಂಘಟನೆಗಳು ಮಂಡ್ಯ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಕೆಆರ್ ಎಸ್ ಜಲಾಶಯ ಸೇರಿದಂತೆ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
ಕೆಆರ್ ಎಸ್ ಗೆ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಇಲ್ಲಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ಇಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ಎಲ್ಲೆಡೆಯಿಂದಲೂ ಪೊಲೀಸರನ್ನು ಬಂದೋಬಸ್ತ್ಗೆ ಕರೆಯಿಸಿಕೊಳ್ಳಲಾಗುತ್ತಿದೆ. ಇನ್ನೊಂದೆಡೆ ಮಂಡ್ಯ ನಗರದ ತಮಿಳು ಕಾಲೋನಿಗೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಡ್ಯಕ್ಕೆ ದಕ್ಷಿಣ ವಲಯ ಪೊಲೀಸ್ ವರಿಷ್ಠಾಧಿಕಾರಿ ವಿಫುಲ್ ಕುಮಾರ್ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡಿದ್ದಾರೆ. ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಭದ್ರತೆ ಕೈಗೊಳ್ಳುವಂತೆ ಎಸ್ಪಿ ರಾಧಿಕಾ ಅವರಿಗೆ ಸೂಚಿಸಿದ್ದಾರೆ.