ನಂಜನಗೂಡು: ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಇದೀಗ ಆ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟಿರುವ ಹಿನ್ನಲೆಯಲ್ಲಿ ಇದೀಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದಾದ್ಯಂತ ಪಕ್ಷದ ಸಂಘಟನೆಯಲ್ಲಿ ತೊಡಗಿರುವುದು ಕಂಡು ಬರುತ್ತಿದೆ.
ಈಗಾಗಲೇ ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಬಳಿಕವಂತು ಸಂಪೂರ್ಣ ತಮ್ಮನ್ನು ತೊಡಗಿಸಿಕೊಂಡ ಡಾ. ಯತೀಂದ್ರ ಸಿದ್ದರಾಮಯ್ಯನವರು ನಾಯಕ ಸಮಾಜದ ಕಾರ್ಯಕರ್ತರ ಸಭೆ ನಡೆಸಿದ್ದು, ಅವರಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿರುವ ತಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಬಗ್ಗೆ ಕಾರ್ಯಕರ್ತರಲ್ಲಿ ಅರಿವು ಮೂಡಿಸಲು ಮುಂದಾದ ಅವರು ಸರ್ಕಾರ ಚುನಾವಣೆ ವೇಳೆ ಯಾವ ರೀತಿಯ ಭರವಸೆಯನ್ನು ನೀಡಿತ್ತೋ ಅದನ್ನು ಈಡೇರಿಸುವಲ್ಲಿ ಸಫಲವಾಗಿದ್ದು, ಮಾತಿಗೆ ತಪ್ಪದ ನಡೆದಂತೆ ನುಡಿದ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಅನುದಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೀಸಲಿಟ್ಟು, ಅದನ್ನು ಜಾರಿಗೆ ತಂದಿದ್ದಾರೆ. ಮಿಕ್ಕ ಯೋಜನೆಗಳನ್ನು ಮುಂದಿನ ಅವಧಿಯಲ್ಲಿ ಪೂರ್ಣಗೊಳಿಸಲು ಯೋಜನೆಯನ್ನು ಹಾಕಿಕೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯತಂತ್ರ ರೂಪಿಸಲಾಗುತ್ತಿದೆ.
ನಾಯಕ ಜನಾಂಗದ ಬೇಡಿಕೆಗಳನ್ನು ಸ್ವೀಕರಿಸಿ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ಪಡೆದುಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದರು.