News Kannada
Friday, September 30 2022

ಮೈಸೂರು

ಮೈಸೂರಿನ ಅರಮನೆಗಿದೆ ರೋಚಕ ಇತಿಹಾಸ - 1 min read

Photo Credit :

ಮೈಸೂರಿನ ಅರಮನೆಗಿದೆ ರೋಚಕ ಇತಿಹಾಸ

ಮೈಸೂರು ದಸರಾದ ಆಕರ್ಷಕ ಕೇಂದ್ರವಾಗಿ ವಿದ್ಯುದೀಪದ ಅಲಂಕರಾದಲ್ಲಿ ಜಗಮಗಿಸುವ ಅರಮನೆಯನ್ನು ನೋಡಿದ ಯಾರೇ ಆಗಲಿ ಒಂದು ಕ್ಷಣ ಮೈಮರೆಯಲಾರರು. ಈ ಅರಮನೆ ಮೈಸೂರಿನ ಮುಕುಟಮಣಿಯಾಗಿ, ರಾಜರ ಇತಿಹಾಸದ ವೈಭವವನ್ನು ಸಾರುತ್ತಾ ನಿಂತಿರುವ ಅರಮನೆ ದಸರಾ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿರುತ್ತದೆ.

ಈ ಅರಮನೆಯ ಇತಿಹಾಸವನ್ನು ಕೆದಕುತ್ತಾ ಹೋದರೆ ಇದರ ಹಿಂದೆ ರೋಚಕ ಇತಿಹಾಸ ಮತ್ತು ಮೈಸೂರು ರಾಜರ ಶ್ರಮ ಎಲ್ಲವೂ ನಮಗೆ ಗೋಚರಿಸುತ್ತದೆ. ಈಗಿರುವ ಅರಮನೆ ಇದ್ದಲ್ಲಿ ಹಿಂದೆ ಮರದ ಅರಮನೆಯೊಂದಿತ್ತು. ಅದನ್ನು 1800 ಮತ್ತು 1804ರಲ್ಲಿ ಕಟ್ಟಲಾಗಿತ್ತು. ಈ ಅರಮನೆಯು ಕಟ್ಟಿಗೆ ಹಾಗೂ ಇಟ್ಟಿಗೆಗಳಿಂದ ನಿರ್ಮಾಣವಾಗಿದ್ದರಿಂದ ಈ ಅರಮನೆ ಆಕಸ್ಮಿಕ ಬೆಂಕಿಗೆ ಆಹುತಿಯಾಯಿತು. ಆ ನಂತರ ಕಟ್ಟಿದ ಅರಮನೆಯೇ ಈಗಿರುವ ಅಂಬಾವಿಲಾಸ್ ಅರಮನೆ.

ಇದರ ನಿರ್ಮಾಣದ ಜವಾಬ್ದಾರಿಯನ್ನು ಮದ್ರಾಸ್ ಸರ್ಕಾರದ ಸಲಹೆಗಾರ ಇಂಜಿನಿಯರಾದ ಹೆನ್ರಿಇರ್ವಿನ್‍ರವರಿಗೆ ವಹಿಸಿಕೊಂಡು ಹಿಂದೆಯಿದ್ದ ಕಟ್ಟಿಗೆಯ ಅರಮನೆ ವಿನ್ಯಾಸದಲ್ಲಿ ಹೊಸ ಅರಮನೆಯನ್ನು ನಿರ್ಮಿಸಬೇಕಾಗಿತ್ತು. ಆದರೆ ಅದರ ನೀಲಿ ನಕ್ಷೆ ಇರಲಿಲ್ಲ ಆ ಬ್ರಿಟಿಷ್ ಸೈನಿಕನೊಬ್ಬ ತನ್ನ ಕ್ಯಾಮರಾದಲ್ಲಿ ಸೆರೆಹಿಡಿದಿದ್ದ ಫೋಟೋ ಅಧಿಕಾರಿಗಳ ಬಳಿಯಿತ್ತು. ಅದನ್ನು ಪಡೆದುಕೊಂಡ ಹೆನ್ರಿ ಇರ್ವಿನ್ ಅದರಂತೆ ಅರಮನೆಯನ್ನು ನಿರ್ಮಿಸಲು ಮುಂದಾದರು.

ಅರಮನೆಯ ಇಂಜಿನಿಯರ್ ಆಗಿ ಬಿ.ಪಿ.ರಾಘವಲುನಾಯಿಡು ಕೆಲಸ ಮಾಡಿದರೆ, ಅರಮನೆಯಲ್ಲಿ ಚಿತ್ರರಚಿಸಲು ನಾಗರಾಜು ಎಂಬ ಕಲಾವಿದನನ್ನು ಚಿತ್ರರಚನೆಯ ಅಧ್ಯಯನಕ್ಕಾಗಿ ಯುರೋಪಿನ ರಾಜ್ಯಗಳಿಗೆ ಕಳುಹಿಸಲಾಯಿತು. ಜೊತೆಗೆ ಹಳೆಬೀಡು, ಬೇಲೂರು ಹಾಗೂ ಸೋಮನಾಥಪುರ ದೇವಾಲಯದ ನಿರ್ಮಾಣದಲ್ಲಿ ಮಾಡಲಾದ ಕುಸುರಿ ಕೆತ್ತನೆಯನ್ನು ಅರಮನೆಯ ನಿರ್ಮಾಣದ ಸಂದರ್ಭ ಅನುಸರಿಸಲಾಯಿತು.

1897 ರಿಂದ ಆರಂಭಗೊಂಡ ಅರಮನೆಯ ನಿರ್ಮಾಣ ಕಾರ್ಯ 1911-12ರಲ್ಲಿ ಸುಮಾರು 41,47,913 ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿತು.

ಕೋಟೆ ಸೇರಿದಂತೆ ಸುಮಾರು 72 ಎಕರೆಗಿಂತಲೂ ಹೆಚ್ಚಿನ ವಿಸ್ತಾರದಲ್ಲಿ ನೆಲೆನಿಂತಿರುವ ಅರಮನೆ 74.50 ಮೀ ಉದ್ದ ಹಾಗೂ 47.50 ಮೀಟರ್ ಅಗಲವಾಗಿದೆ. ಅರಮನೆಯ ಮುಖ್ಯ ಕಟ್ಟಡವನ್ನು ಕಂದು ಬಣ್ಣದ ದಪ್ಪ ಸ್ಪಟಿಕದ ಗಟ್ಟಿ ಶಿಲೆಗಳಿಂದ ನಿರ್ಮಿಸಲಾಗಿದೆ. ಅರಮನೆಯ ಮಧ್ಯಭಾಗದ ಐದು ಅಂತಸ್ತಿನ ಬಂಗಾರದ ಗಿಲೀಟಿನ ಗಗನಚಂಬಿ ಗೋಪುರವು ಭೂಮಿಯಿಂದ ಸುಮಾರು 145 ಅಡಿ ಎತ್ತರದಲ್ಲಿದೆ.

ಅರಮನೆಯು ಬೆಳಕಿಗೆ ಬಿಟ್ಟಿರುವ ಅಂಗಳದ (ತೊಟ್ಟಿ) ಸುತ್ತಲೂ ಕಟ್ಟಲ್ಪಟ್ಟಿದೆ. ಈ ತೊಟ್ಟಿಯ ಪೂರ್ವಭಾಗಕ್ಕೆ 21 ಅಡಿ ಅಗಲ ಹಾಗೂ 66 ಅಡಿ ಎತ್ತರವಿರುವ ಆಕರ್ಷಕ ಆನೆಯ ದ್ವಾರವಿದೆ. ದೊಡ್ಡ ಅಂಗಳದಲ್ಲಿ ಹೊರಗಡೆ ಸಜ್ಜೆಗೆ ಹೋಗುವ 15 ಅಡಿ ಅಗಲವುಳ್ಳ ದಾರಿಗಳು ದೊಡ್ಡ ಚೌಕದ ಹಾಗೆ ಕಾಣುತ್ತವೆ. ಇನ್ನು ಎರಡನೆ ಅಂತಸ್ತಿನಲ್ಲಿ ಪೂರ್ವ ಭಾಗಕ್ಕೆ 155 ಅಡಿ ಅಗಲವಿರುವ ವಿಶಾಲ ರಾಜ ಸಭಾಮಂದಿರವಿದೆ. ಅದರ ಮೇಲೆ ಖಾಸಗಿ ನಿವಾಸಿ ಸ್ಥಳಗಳಿವೆ. ಕೆಳಗಿನ ಉಪ್ಪರಿಗೆಗೆ ಬಂದರೆ ಅಂಗಳದ ಉತ್ತರ ಭಾಗದಲ್ಲಿ ಆಯುಧಶಾಲೆ, ಪುಸ್ತಕ ಭಂಡಾರ, ಅವುಗಳ ಮೇಲೆ ಸಂಗೀತದ ಕೊಠಡಿ, ಸ್ತ್ರೀಯರ ಸ್ವಾಗತ ಕೊಠಡಿ ಮತ್ತು ಮೂರನೆಯ ಅಂತಸ್ತಿನಲ್ಲಿ ವಿಶ್ರಾಂತಿ ಕೊಠಡಿಗಳಿವೆ. ಒಳ ಅಂಗಳದ ಪಶ್ಚಿಮಕ್ಕೆ ಹಳೆಯ ಅರಮನೆಯಿದೆ. ದಕ್ಷಿಣ ಭಾಗದ ಹತ್ತಿರದಲ್ಲೇ ಮುದ್ದಾದ ನವಿಲಿನ ಕಲ್ಯಾಣ ಭದ್ರಮಂಟಪವಿದೆ. ಮುಂದೆ ಹೋದರೆ ಎರಡನೆಯ ಉಪ್ಪರಿಗೆಯಲ್ಲಿ ಅಂಬಾವಿಲಾಸ ಸಭಾ ಮಂಟಪವಿದೆ. ಅರಮನೆಯ ದಕ್ಷಿಣ ಭಾಗದಲ್ಲಿ ರಾಣೀವಿಲಾಸ ಹಾಗೂ ಪೂಜಾ ಕೊಠಡಿಗಳಿವೆ. ಇವು ಅಂಬಾವಿಲಾಸ ಸಭಾಭವನದವರೆಗೂ ವಿಸ್ತರಿಸಿವೆ. ಮಧ್ಯಭಾಗದ ಮೂರು ನಾಲ್ಕು ಮತ್ತು ಐದನೇ ಅಂತಸ್ತುಗಳು ಮುಖ್ಯಗೋಪುರ ಶಿಖರಕ್ಕೆ ಆಧಾರಸ್ತಂಭಗಳಂತೆ ನಿಂತಿವೆ. ಅರಮನೆಯ ಹೊರನೋಟ ಹಿಂದೂ ಗ್ರೀಕ್ ಕಲೆಯ ರೂಪರೇಖೆಗಳಂತೆ ಕಂಡರೆ, ಬಾಗಿಲುಗಳ ಕಮಾನುಗಳ ಕಂಬ ಮತ್ತು ಬೋದುಗಳ ಅಲಂಕಾರಗಳು ಸ್ಪಷ್ಟ ಹೊಯ್ಸಳ ರೀತಿಯ ಕಲಾಕೃತಿಗಳಾಗಿವೆ. ಅರಮನೆಯ ಮಧ್ಯದ ಗೋಪುರವು ಪ್ರಭಾವಯುತವಾಗಿದ್ದು ಉಳಿದವುಗಳೆಲ್ಲವೂ ಅದಕ್ಕೆ ಹೊಂದಿಕೊಂಡ ಆಕೃತಿಗಳಾಗಿವೆ. ಅರಮನೆಯ ಮುಖ್ಯ ಮುಖಭಾಗದಲ್ಲಿ ಬೆಳಕು ಮತ್ತು ನೆರಳನ್ನು ಪಡೆಯುವ ಉದ್ದೇಶದಿಂದ ಗೋಪುರಗಳ, ಮಸೀದಿಯ ರೀತಿಯ ಶಿಖರಗಳ ಕೈಸಾಲೆ, ಉಪ್ಪರಿಗೆಯ ಮೊಗಸಾಲೆಗಳ. ವಸಾರೆ, ಪಡಸಾಲೆ, ಜಗಲಿಗಳ ಪೌಳಿ ಮಂಟಪಗಳ ಹಾಗೂ ಗೋಪುರ ಶಿಖರಗಳನ್ನು ಬಿಡಿಸಿ ನಿರ್ಮಿಸಲಾಗಿದೆ. ಮುಂಭಾಗದಲ್ಲಿ ಬೃಹತ್ ಕಂಬಗಳ ಜೊತೆಗೆ ಸ್ಪಟಿಕದ ಗಟ್ಟಿ ಶಿಲೆಗಳನ್ನು ಕೊರೆದು ನಿರ್ಮಿಸಿರುವ, ಪಡಸಾಲೆ, ಉಪ್ಪರಿಗೆಯ ಮೊಗಸಾಲೆಗಳು ತಮ್ಮದೇ ಆದ ಶ್ರೀಮಂತಿಕೆಯ ವೈಭವವನ್ನು ಸೂಚಿಸುತ್ತವೆ. ಅರಮನೆಯ ಅಡಿಪಾಯದಿಂದ ಮುಖ್ಯ ಗೋಪುರದ ತುದಿಯವರೆಗೂ ಉತ್ತಮ ಮಟ್ಟದ ಹಿಂದೂ ಶಿಲ್ಪ ವಿದ್ಯೆಯ ನುರಿತ ಕೆಲಸಗಾರರಿಂದ ಶಿಲ್ಪಕಲೆ ರಚಿಸಲ್ಪಟ್ಟಿದೆ. ಅಲ್ಲದೆ ಉಚ್ಛ ರೀತಿಯ ಹಿಂದೂ ಶಿಲ್ಪ ಕಲೆ ಮತ್ತು ಗ್ರೀಕ್ ಕಲೆಯು ಮಿಳಿತಗೊಂಡು ಶೋಭಾಯಮಾನವಾಗಿ ಕಂಗೊಳಿಸುತ್ತದೆ.

See also  ತಿ.ನರಸೀಪುರದ ಜೆಡಿಎಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಅರಮನೆಯಲ್ಲಿ ಮಾಡಿದ ಕಲ್ಲಿನ, ದಂತ ಮತ್ತು ಮರದ ಕೆತ್ತನೆ ಕೆಲಸ ಅಲ್ಲದೆ ಕಲ್ಲಿನ ಕುಂದಣ ಕೆಲಸ, ಲೇಪದ ಕೆಲಸಗಳು ಕಲೆಗಾರನ ಕೈಚಳಕನ್ನು ಪ್ರದರ್ಶಿಸಿದೆ. ಕಟ್ಟಡದ ವಿವಿಧೆಡೆ ಸ್ಪಟಿಕದ ಕಲ್ಲು, ಕಂದುಬಣ್ಣದ ಶಿಲೆ, ಕಾಗೆ ಬಂಗಾರದಂತೆ ಮಿನುಗುವ ಬೆಣಚು ಶಿಲೆಗಳನ್ನು ಬಳಸಲಾಗಿದೆ. ಚಿತ್ರ ವಿಚಿತ್ರವಾದ ಬಣ್ಣದ ನಯಮಾಡಿದ ಕಲ್ಲಿನ ಕಂಬಗಳು ಯೋಗ್ಯ ಸ್ಥಳಗಳಲ್ಲಿ ನಿರ್ಮಿಸಲ್ಪಟ್ಟಿದೆ. ಅರಮನೆಯಲ್ಲಿರುವ ಅಂಬಾವಿಲಾಸ ದರ್ಬಾರ್ ಹಾಲ್ ರಾಜವೈಭವವನ್ನು ಸಾರುತ್ತದೆ. ಇಲ್ಲಿ 750 ಕೆ.ಜಿ. ತೂಕದ ಭವ್ಯ ಚಿತ್ತಾರದ ಚಿನ್ನದ ಅಂಬಾರಿ ಇದೆ. ಅಲ್ಲದೆ 135 ಕೆ.ಜಿ. ಬಂಗಾರವುಳ್ಳ ರತ್ನಖಚಿತ ಸಿಂಹಾಸನವೂ ಇದೆ. ಇನ್ನು ಅರಮನೆಯಲ್ಲಿನ ಆಯುಧ ಶಾಲೆ, ಸಂಗೀತ ಕೊಠಡಿ ಸೇರಿದಂತೆ ಹತ್ತು ಹಲವು ನೋಡತಕ್ಕ ಅತ್ಯಪೂರ್ವ ವಸ್ತುಗಳಿದ್ದು, ಇದೊಂದು ಅದ್ಭುತ ಸಂಗ್ರಹಾಲಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು