ಮೈಸೂರು: ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು,ಉತ್ತಮ ಪ್ರಗತಿ ಮಾಡಿದೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ತಿಳಿಸಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಮೊದಲ ಸ್ಥಾನದಲ್ಲಿದ್ದಾರೆ. ಸುಮಾರು 2410 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ಕಾಂಗ್ರೆಸ್ ತೆಕ್ಕೆಗೆ 169ಗ್ರಾಮಪಂಚಾಯತ್ ಗಳು ಸೇರಲಿದ್ದು ಅಧಿಕಾರ ಹಿಡಿಯಲಿದೆ. ಚುಣಾವಣೆಯಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿರುವುದು ಸಾಬೀತಾಗಿದೆ ಎಂದರು.
ಫಲಿತಾಂಶ ಪ್ರಕಟವಾಗುವ ಮುನ್ನವೇ ಜಿಲ್ಲಾ ಉಸ್ತುವಾರಿ ಸಚಿವರು ಹಾಸ್ಯಾಸ್ಪದ ಹೇಳಿಕೆ ನೀಡಿದ್ದು ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನವನ್ನು ಗೆದ್ದಿದ್ದರೆ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಕೋವ್ಯಾಕ್ಸಿನ್ಸ್ ಹಂಚಿಕೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆ ಪೂರ್ಣಗೊಂಡಿಲ್ಲ. ಸಂಶೋಧನೆಗೆ ಸಂಬಂಧಿಸಿದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಜನರಲ್ಲಿ ಅಪನಂಬಿಕೆ, ಸಂಶಯ ಮೂಡಿದೆ. ಇದನ್ನು ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ದನ್ ಅವರು ನಿವಾರಣೆ ಮಾಡಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರಲ್ಲಿ ಇರುವ ಗೊಂದಲ ಪರಿಹರಿಸಲು ಮುಂದಾಗಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಮುಖಂಡರಾದ ಸುನಿಲ್ ಬೋಸ್, ಎಸ್.ಡಿ.ರವಿಶಂಕರ್, ಜಿ.ವಿ.ಸೀತಾರಾಮ್ ಉಪಸ್ಥಿತರಿದ್ದರು.