ಮೈಸೂರು: ಚುನಾವಣೆಗಳಲ್ಲಿ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಜನಪ್ರತಿನಿಧಿಗಳ ಆಯ್ಕೆಯಲ್ಲಿ ಭಾಗವಹಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವರಾಜ್ ಭೂತೆ ತಿಳಿಸಿದರು.
ಕಲಾಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 1950ರಲ್ಲಿ ಚುನಾವಣಾ ಆಯೋಗ ಸ್ಥಾಪನೆ ಆಯಿತು. ಮತದಾರರ ದಿನಾಚರಣೆಯನ್ನು 2011ರಿಂದ ಆಚರಣೆ ಮಾಡಲಾಗುತ್ತಿದೆ. ಇದರ ಮುಖ್ಯ ಉದ್ದೇಶ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದು ಹಾಗೂ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತದಾನ ಮಾಡುವುದು ಆಗಿದೆ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅವಕಾಶ ಮತದಾರರಿಗೆ ಇದೆ. 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಿ ಎಂದರು.
ಕಾರ್ಯ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಯುವ ಜನತೆಯನ್ನು ಮತದಾನದದಲ್ಲಿ ಭಾಗವಹಿಸುವಂತೆ ಮಾಡುವುದು, ಶಾಂತಿಯುತ ಮತದಾನ ಮಾಡುವುದು ಚುನಾವಣಾ ಆಯೋಗದ ಉದ್ದೇಶ. ನಮ್ಮ ಜಿಲ್ಲೆಯಲ್ಲಿ 1 ಲಕ್ಷಕ್ಕಿಂತ ಹೆಚ್ಚಿನ ಯುವ ಮತದಾರರು ಇದ್ದಾರೆ. ಆದರೆ, 30 ಸಾವಿರ ಅಷ್ಟೇ ನೋಂದಣಿ ಆಗಿದ್ದಾರೆ. ವೋಟರ್ ಹೆಲ್ಪ್ ಲೈನ್ ಆಪ್ ಅನ್ನು ನಿಮ್ಮ ಮೊಬೈಲ್‌ನಲ್ಲಿ ಡೌನ್ಲೋಡ್ ಮಾಡಿಕೊಂಡು ನೊಂದಣಿ, ತಿದ್ದುಪಡಿ ಮಾಡಿಕೊಳ್ಳಬಹುದು. ಪ್ರಜ್ಞಾವಂತ ಮತದಾರರಿಂದ ಸದೃಢ ದೇಶ ನಿರ್ಮಾಣ ಮಾಡಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ, ಮಾಹಿತಿ ಸರಿಯಾಗಿ ಇದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಿ, ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಇ ಎಪಿಕ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಪೂರ್ಣಿಮಾ, ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಓಗಳಿಗೆ, ಪ್ರಬಂಧ, ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್, ಮುಡಾ ಆಯುಕ್ತ ದಿನೇಶ್, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಶಿವರಾಜ್, ಡಿಸಿಪಿ ಗೀತಾ, ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ರೂಪಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.