ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ವತಿಯಿಂದ ಈ ಹಿಂದೆ ಚುನಾವಣೆಯಲ್ಲಿ ಕಡಿಮೆ ಮತದಾನ ಆಗಿರುವ ಮತಗಟ್ಟೆ ವ್ಯಾಪ್ತಿಯ ಮತದಾರರಿಗೆ ಜಾಗೃತಿ ಮೂಡಿಸಲು ವಿಶೇಷವಾಗಿ ರೂಪಿಸಲಾಗಿರುವ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ಡಿಎಸ್.ರಮೇಶ್ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಪೂವಿತಾ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಹಸಿರು ನಿಶಾನೆ ತೋರುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಲು ವಿನ್ಯಾಸಗೊಳಿಸಿರುವ ವಾಹನ ಸಂಚಾರಕ್ಕೆ ಚಾಲನೆ ಕೊಟ್ಟರು. ಈ ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ೯೮ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಜಾಗೃತಿ ಮೂಡಿಸಲು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೋಲಿಗರ ಮಾದಮ್ಮ, ಚಿತ್ರನಟರು ಸೇರಿದಂತೆ ವಿವಿಧ ಗಣ್ಯರು ಮತದಾನದ ಮಹತ್ವವನ್ನು ತಿಳಿಸಿಕೊಡುವ ಆಡಿಯೋ ಮತ್ತು ವೀಡಿಯೋ ತುಣುಕುಗಳನ್ನು ಒಳಗೊಂಡಿರುವ ವಾಹನ ಇಂದಿನಿಂದ ಮೇ ೫ರವರೆಗೆ ಸಂಚರಿಸಲಿದೆ.
ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ವಾಹನ ಸಂಚರಿಸಿ ಜಾಗೃತಿ ಮೂಡಿಸಲಿದೆ. ಮತದಾರರ ಜಾಗೃತಿಗಾಗಿ ಸ್ವೀಪ್ ಚಟುವಟಿಕೆಗಳನ್ನು ಚುರುಕುಗೊಳಿಸಲಾಗಿದ್ದು ಜಾಥಾ, ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್, ಗೋಡೆ ಬರಹ, ಇನ್ನಿತರ ಕಾರ್ಯ ಚಟುವಟಿಕೆಗಳ ಮೂಲಕ ಮತದಾನದ ಮಹತ್ವ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಹಾಯಕ ಯೋಜನಾಧಿಕಾರಿ ಧರಣೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.