ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಹಾಸನ ಜಿಲ್ಲೆಯ ೭ ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಎಐಸಿಸಿ ಯಿಂದ ಘೋಷಣೆ ಮಾಡಲಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಮುರಳಿ ಮೋಹನ್ ಹಾಗೂ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಶ್ರೇಯಸ್ ಪಟೇಲ್ ಅವರನ್ನು ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ.
ಹೊಳೆನರಸಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಅವರು ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಬಾರಿ ಕಾಂಗ್ರೆಸ್ ಮುಖಂಡರಾದ ಬಾಗೂರು ಮಂಜೇಗೌಡ ೫೦,೦೦೦ಕ್ಕೂ ಹೆಚ್ಚು ಮತಗಳನ್ನು ಪಡೆದು ಪರಾಭವ ಹೊಂದಿದ್ದರು. ಆದರೆ ಈ ಬಾರಿ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಲವು ದಶಕಗಳ ಬಳಿಕ ತನ್ನ ಖಾತೆಯನ್ನು ತೆರೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ ಸುರೇಶ್ ಅವರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ.
ಇನ್ನು ಸಕಲೇಶಪುರ ಮೀಸಲು ಕ್ಷೇತ್ರದಿಂದ ಹೊಸ ಮುಖ ಎಂದೆ ಬಿಂಬಿತವಾಗಿರುವ ಮುರಳಿ ಮೋಹನ್ ಅವರನ್ನು ಆಯ್ಕೆ ಮಾಡುವ ಮೂಲಕ ಎಐಸಿಸಿ ಅಚ್ಚರಿ ಮೂಡಿಸಿದೆ.
ಈ ಬಾರಿಯೂ ಹೊಸಬರಿಗೆ ಮಣೆ ಹಾಕಿರುವ ಕಾಂಗ್ರೆಸ್ ಪಕ್ಷ ಹಾಲಿ, ಜೆಡಿಎಸ್ ಶಾಸಕ ಹಾಗೂ ಸತತ ಗೆಲುವಿನ ಮೂಲಕ ವಿಶ್ವಾಸದಲ್ಲಿರುವ ಎಚ್ ಕೆ ಕುಮಾರಸ್ವಾಮಿ ಅವರ ವಿರುದ್ಧ ಯಾವ ರಣತಂತ್ರ ಹೆಣೆಯಲಿದೆ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷ ಪ್ರತಿ ಚುನಾವಣೆಯಲ್ಲಿಯೂ ಒಗ್ಗಟ್ಟು ಪ್ರದರ್ಶನ ಮಾಡದೆ ಒಳ ಜಗಳದಿಂದಲೇ ಹಿನ್ನಡೆ ಅನುಭವಿಸುತ್ತಿದ್ದು ಈ ಬಾರಿಯ ಚುನಾವಣೆಯಲ್ಲಿ ಯಾವ ರೀತಿ ತಮ್ಮ ಅಸ್ತಿತ್ವವನ್ನು ಕಾಪಾಡಿಕೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ .
ಉಳಿದಂತೆ ಐದು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಬೇಕಿದ್ದು ಚುನಾವಣೆ ಸಮೀಪಿಸುತ್ತಿರುವುದರಿಂದ ಅಭ್ಯರ್ಥಿಗಳ ಪಟ್ಟಿಯನ್ನು ಬೇಗ ಬಿಡುಗಡೆ ಮಾಡಿದರೆ ಸಂಘಟನೆಗೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚು ನೆರವಾಗಲಿದೆ ಎಂಬ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಕೇಳಿ ಬರುತ್ತಿದೆ.
ಹಾಸನ ಜಿಲ್ಲೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪಕ್ಷ ಮಾತ್ರ ಎರಡು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ್ದು ಉಳಿದ ಪಕ್ಷಗಳು ಇನ್ನೂ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿಲ್ಲ. ಕೆಎಂಶಿ, ಎಟಿಆರ್ ಹೆಸರು ಶಿಫಾರಸ್ಸು ಇನ್ನುಳಿದ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಸದ್ಯದಲ್ಲೇ ಘೋಷಣೆಯಾಗಲಿದ್ದು ಕೆಪಿಸಿಸಿಯಿಂದ ಎಐಸಿಸಿಗೆ ನೀಡಿರುವ ಆಕಾಂಕ್ಷಿಗಳ ಪಟ್ಟಿಯಲ್ಲಿ ಅರಕಲಗೂಡು ಕ್ಷೇತ್ರದಿಂದ ಜೆಡಿಎಸ್‌ನ ಹಾಲಿ ಶಾಸಕ ಎ.ಟಿ. ರಾಮಸ್ವಾಮಿ ಹಾಗೂ ಕೃಷ್ಣೇಗೌಡ, ಅರಸೀಕೆರೆ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ, ಶ್ರವಣಬೆಳಗೊಳ ಕ್ಷೇತ್ರದಿಂದ ಮಾಜಿ ಎಂ.ಎಲ್.ಸಿ. ಗೋಪಾಲಸ್ವಾಮಿ, ಬೇಲೂರಿನಿಂದ ಗಂಡಸಿ ಶಿವರಾಂ, ಕೃಷ್ಣೇಗೌಡರವರ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.