ಮೈಸೂರು: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮತ್ತು ಅವರ ಕುಟುಂಬ ಗುರುವಾರ ಜೆಎಸ್ಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಗಾಯಾಳುಗಳ ಆರೋಗ್ಯ ಸ್ಥಿತಿಗತಿಗಳ ಕುರಿತು ಪ್ರಧಾನಿ ಕಚೇರಿಗೆ ಪ್ರತಿದಿನ ಮಾಹಿತಿ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮತ್ತು ಅವರ ಕುಟುಂಬವು ಡಿಸ್ಚಾರ್ಜ್ ಆದ ನಂತರ ಹೆಚ್ಚುವರಿ ಎರಡು ದಿನಗಳ ಕಾಲ ಮೈಸೂರಿನಲ್ಲಿ ಉಳಿಯಲಿದ್ದು, ಅವರ ಮೊಮ್ಮಗನ ಚಿಕಿತ್ಸೆಯು ಗುರುವಾರದವರೆಗೆ ಮುಂದುವರಿಯುತ್ತದೆ ಎಂದು ಮೂಲಗಳು ತಿಳಿಸಿವೆ.
ಗಾಯಾಳುಗಳನ್ನು ಐಸಿಯುನಿಂದ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ಕಡಕೋಳ ಗ್ರಾಮದ ಬಳಿ ಮಂಗಳವಾರ ಈ ದುರ್ಘಟನೆ ನಡೆದಿದೆ.
ಕುಟುಂಬ ಸಮೇತರಾಗಿ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಪ್ರವಾಸಿ ತಾಣ ಬಂಡೀಪುರ ಕಡೆಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
70 ವರ್ಷದ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಅವರ ಗಲ್ಲದ ಮೇಲೆ ಗಾಯವಾಗಿದೆ. ಅವರ ಮಗ ಮೆಹುಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿನಾಲ್ ಮೋದಿ ಮತ್ತು ಆರು ವರ್ಷದ ಮೊಮ್ಮಗ ಮೆನತ್ ಮೆಹುಲ್ ಮೋದಿ ಮತ್ತು ಚಾಲಕ ಸತ್ಯನಾರಾಯಣ ಕೂಡ ಗಾಯಗೊಂಡಿದ್ದಾರೆ.
ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.