ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 2-3 ತಿಂಗಳಿಂದ ಕೆಲವರು ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದ ವ್ಯಕ್ತಪಡಿಸಿದ್ದಾರೆ.
ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.59ರಲ್ಲಿ ಆಯೋಜಿಸಲಾಗಿದ್ದ ಯೋಗಕ್ಷೇಮ ಯಾತ್ರೆ ವೇಳೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಅಭಿವೃದ್ಧಿಯ ಮಂತ್ರ ಪಠಿಸುತ್ತದೆಯೇ ಹೊರತು, ಅನ್ಯ ವಿಚಾರಗಳತ್ತ ಗಮನ ಹರಿಸುವುದಿಲ್ಲ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಸಾಬೀತು ಮಾಡಿದ್ದಾರೆ. ಆ ನಿಟ್ಟಿನಲ್ಲಿ ನಮ್ಮೆಲ್ಲರ ಚಿತ್ತ ಇರಬೇಕು ಎಂದು ಸೂಚ್ಯವಾಗಿ ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಇಂದು ಕೆ.ಆರ್.ಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಾಹಿತಿ ತಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುಂಬಿದ ಸಮಾವೇಶದಲ್ಲಿ ಬೆನ್ನು ತಟ್ಟಿ ಆಶೀರ್ವದಿಸಿದ್ದಾರೆ. ಈ ಎಲ್ಲಾ ಫಲ ಕ್ಷೇತ್ರದ ಜನರಿಗೆ ಸಲ್ಲಲಿದೆ ಎಂದ ಅವರು ಯಾರೋ ಕೆಲವರ ಮಾತಿಗೆ ಮನ್ನಣೆ ನೀಡುವ ಅಗತ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಕಳೆದ ಸಾಲಿನಲ್ಲಿ ಸರ್ಕಾರ ರಚನೆ ವೇಳೆ ಸಂಖ್ಯೆಯ ಕೊರತೆ ಉಂಟಾಯಿತು. ಆದರೆ, ಈ ಬಾರಿ ಹಾಗಾಗದಂತೆ ಎಚ್ಚರ ವಹಿಸಬೇಕಿದೆ. ಕನಿಷ್ಠ 150 ಸ್ಥಾನಗಳನ್ನು ಭಾರತೀಯ ಜನತಾ ಪಕ್ಷ ಗೆಲ್ಲಲೇಬೇಕಿದೆ. ಈ ಮೂಲಕ ಸಂಘಟನಾತ್ಮಕ ಹೋರಾಟ ಮಾಡಬೇಕಿದೆ ಎಂದು ಹೇಳಿದರು.
ಕ್ಷೇತ್ರ ವ್ಯಾಪ್ತಿಯ 482ಕಿಮೀ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆಗೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಮಾತ್ರವಲ್ಲ ಮುಂದಿನ ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡುಬಾರದ ರೀತಿಯಲ್ಲಿ ದೂರದೃಷ್ಟಿಯ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ ಎಂದರು.
ಜಾತಿ, ಧರ್ಮ ಮೀರಿ ಈ ಕ್ಷೇತ್ರದ ಜನ ನನ್ನನ್ನು ಮನೆ ಮಗನಂತೆ ಕಂಡಿದ್ದಾರೆ, ಆಶೀರ್ವದಿಸಿದ್ದಾರೆ. ಅದರಂತೆಯೇ ನಾನು ಶಾಸಕನಾಗಿದ್ದ ಅಷ್ಟೂ ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿ ಇದೆ ಎಂದ ಅವರು, ಕಳೆದ ಐದು ವರ್ಷಗಳಲ್ಲಿ ನಡೆಯುತ್ತಿರುವ ಐದನೇ ಯೋಗಕ್ಷೇಮ ಯಾತ್ರೆ ಇದಾಗಿದೆ. ಜನರ ಕಷ್ಟಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಈ ವೇಳೆ ಮಾಜಿ ಮೇಯರ್ ಸುನಂದಾ ಪಾಲನೇತ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.