ಮೈಸೂರು: ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ನಂಜನಗೂಡಿನ ಗೋಳೂರು ಗ್ರಾಮದ ಬಳಿ ಬೃಹತ್ ಕಾರ್ಯಕರ್ತರ ಬಹಿರಂಗ ಸಭೆಯನ್ನು ನಡೆಸಲಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆಯನ್ನು ಸಲ್ಲಿಸಿದ ಬಳಿಕ ನಂಜನಗೂಡಿಗೆ ಆಗಮಿಸಿ ವೇದಿಕೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ನಂತರ ಕಾಲ್ನಡಿಗೆಯಲ್ಲಿ ಕಾರ್ಯಕರ್ತರೊಂದಿಗೆ ತೆರಳಿ ನಂಜನಗೂಡು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಆಗಮಿಸಲಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.