ಜ.26ರಂದು ಬನ್ನಿಮಂಟಪದಲ್ಲಿ ಸರಳ ಗಣರಾಜ್ಯೋತ್ಸವ

ಜ.26ರಂದು ಬನ್ನಿಮಂಟಪದಲ್ಲಿ ಸರಳ ಗಣರಾಜ್ಯೋತ್ಸವ

LK   ¦    Jan 21, 2021 08:55:26 AM (IST)
ಜ.26ರಂದು ಬನ್ನಿಮಂಟಪದಲ್ಲಿ ಸರಳ ಗಣರಾಜ್ಯೋತ್ಸವ

ಮೈಸೂರು: ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥ್‍ಸ್ವಾಮಿ ತಿಳಿಸಿದರು.

ಗಣರಾಜ್ಯೋತ್ಸವ ದಿನಾಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ,, ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಬನ್ನಿಮಂಟಪದ ಪಂಜಿನಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ಸಂದೇಶ ನೀಡಲಿದ್ದಾರೆ. ಈ ಬಾರಿ ಪೆÇಲೀಸ್ ಪೆರೇಡ್ ಮಾತ್ರ ಇರಲಿದ್ದು, ಕೋವಿಡ್-19 ಹಿನ್ನಲೆ ಶಾಲಾ ಮಕ್ಕಳ ಪೆರೇಡ್ ನಡೆಸಲಾಗುತ್ತಿಲ್ಲ ಎಂದು ತಿಳಿಸಿದರು.

ಇತ್ತೀಚಿಗೆ ಜಿಲ್ಲೆಯಲ್ಲಿ ಕೋವಿಡ್-19 ಪೀಡಿತರ ಸಂಖ್ಯೆ ಇಳಿಮುಖವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಕೊರೊನಾ ಸೋಂಕು ನಿಯಂತ್ರಿಸಲು ಕೇಂದ್ರ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿ ಇನ್ನೂ ಸಡಿಲವಾಗಿಲ್ಲ. ಹಾಗಾಗಿ ಸೋಂಕು ನಿಯಂತ್ರಿಸುವ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯ ಸರ್ಕಾರಿ ನೌಕರರಿಗೆ ಪ್ರತೀ ವರ್ಷದಂತೆ ನೀಡುತ್ತಿದ್ದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು, ಈ ಬಾರಿ ಏಪ್ರಿಲ್ 21ರಂದು ನೀಡಲಾಗುವುದು. ಸರ್ಕಾರ ಏಪ್ರಿಲ್ 21 ರಂದು ಸರ್ಕಾರಿ ನೌಕರರ ದಿನವನ್ನಾಗಿ ಆಚರಿಸಲು ಆದೇಶ ಹೊರಡಿಸಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಈಗಾಗಲೇ ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತೀ ಇಲಾಖೆಯಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ನೌಕರರು ಇಲಾಖೆಯಲ್ಲಿನ ಮುಖ್ಯಸ್ಥರ ಶಿಫಾರಸ್ಸಿನ ಮೇರೆಗೆ ಅರ್ಜಿ ಸಲ್ಲಿಸಬಹುದು ಎಂದರು.

ಈ ಸಂದರ್ಭದಲ್ಲಿ ಮುಡಾ ಆಯುಕ್ತ ಡಿ.ಬಿ.ನಟೇಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರೇಮ್‍ಕುಮಾರ್,  ಡಿಡಿಪಿಐ ಡಾ.ಪಾಂಡುರಂಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ಕನ್ನಡ ಪರ ಹೋರಾಟಗಾರಾದ ತಾಯೂರು ವಿಠಲಮೂರ್ತಿ ಸೇರಿದಂತೆ ಇತರರು ಹಾಜರಿದ್ದರು.