ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

CI   ¦    Jan 14, 2020 09:12:00 PM (IST)
ಸಂತ್ರಸ್ತರಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಿ: ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ಮಳೆಹಾನಿ ಸಂತ್ರಸ್ತರಿಗೆ ಬೆಳೆ ಹಾಗೂ ಮನೆಹಾನಿ ಪರಿಹಾರ ಸಂಬಂಧ ಸಮರ್ಪಕವಾಗಿ ತಲುಪಬೇಕು. ಆ ನಿಟ್ಟಿನಲ್ಲಿ ಸಂತ್ರಸ್ತರಿಂದ ಬ್ಯಾಂಕ್ ಖಾತೆ ಪಡೆದು ಪರಿಹಾರ ಒದಗಿಸುವಂತಾಗಬೇಕು. ಎನ್‍ಪಿಸಿಐ(ನ್ಯಾಷನಲ್ ಪೇಮೆಂಟ್ ಕಾರ್ಪೋರೇಷನ್ ಆಫ್ ಇಂಡಿಯಾ) ರಾಷ್ಟ್ರೀಯ ಪಾವತಿ ನಿಗಮದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರಕೃತಿ ವಿಕೋಪದಡಿ ಸಂತ್ರಸ್ತರಿಗೆ ಪರಿಹಾರ ತಲುಪಿಸುವ ಬಗ್ಗೆ ವಿವಿಧ ಬ್ಯಾಂಕ್‍ಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬ್ಯಾಂಕರ್ಸ್‍ಗಳು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ತಮ್ಮ ತಮ್ಮ ಬ್ಯಾಂಕರ್ಸ್‍ಗಳ ಸಭೆ ನಡೆಸಿ ಸಮಸ್ಯೆ ಇದ್ದಲ್ಲಿ ಪರಿಹರಿಸಬೇಕು. ಸಂತ್ರಸ್ತರ ಹೆಸರು, ಬ್ಯಾಂಕ್ ಖಾತೆ, ಬ್ಯಾಂಕ್‍ನ ಹೆಸರು, ಶಾಖೆ ಈ ಬಗ್ಗೆ ಎನ್‍ಪಿಸಿಐ ಮತ್ತು ಆಧಾರ್ ಜೋಡಣೆ ಆಗಬೇಕು ಎಂದು ಅವರು ಹೇಳಿದರು.

ಅರ್ಹ ಸಂತ್ರಸ್ತರಿಗೆ ಪರಿಹಾರ ದೊರೆಯಬೇಕು. ಯಾವುದೇ ಕಾರಣಕ್ಕೂ ವಿಳಂಬವಾಗಬಾರದು. ಹೋಬಳಿವಾರು ಸಂತ್ರಸ್ತರ ಮಾಹಿತಿ ಪಡೆದು ಬ್ಯಾಂಕ್‍ಗಳಿಂದ ಪರಿಹಾರ ವಿತರಣೆ ಸಂಬಂಧ ಮುತುವರ್ಜಿವಹಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ ಅವರು ಮಾತನಾಡಿ ಸಂತ್ರಸ್ತರಿಗೆ ಬ್ಯಾಂಕ್‍ಗಳ ಮೂಲಕ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಈ ಸಂಬಂಧ ಬ್ಯಾಂಕ್‍ಗಳ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವ ಸಂಬಂಧ ಇನ್ನೂ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಹೇಳಿದರು.

ಭಾರತೀಯ ಸ್ಟೇಟ್ ಬ್ಯಾಂಕ್‍ನ ನಗರದ ಮುಖ್ಯ ಶಾಖೆಯ ವ್ಯವಸ್ಥಾಪಕರಾದ ದಿನೇಶ್ ಪೈ, ವಿವಿಧ ಬ್ಯಾಂಕ್‍ಗಳ ವ್ಯವಸ್ಥಾಪಕರು, ಇತರರು ಹಲವು ಮಾಹಿತಿ ನೀಡಿದರು.