ಹೊಸದಿಲ್ಲಿ: ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮೀರಾ ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಬೆಳಿಗ್ಗೆ ಪಾರ್ಲಿಮೆಂಟ್ ಹೌಸ್ಗೆ ಬಂದು ಮೀರಾ ಕುಮಾರ್, ಇಲ್ಲಿನ ಲೋಕಸಭಾ ಕಾರ್ಯದರ್ಶಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಮೀರಾ ಕುಮಾರ್ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಎನ್ಸಿಪಿ ಮುಖಂಡ ಶರದ್ ಪವಾರ್ ಸಿಪಿಎಂ ಮುಖಂಡ ಸೀತರಾಂ ಯೆಚೂರಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಹಾಗೂ ಮತ್ತಿತರ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮೀರಾ ಕುಮಾರ್ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಸಿದರು. ಮುಂದಿನ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 17ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.