ಬೆಂಗಳೂರು, : ಜೂನ್ 3ರಂದು ಕೇರಳ ಕರಾವಳಿ ನಂತರ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜೂನ್ 3ರಂದು ನೈಋತ್ಯ ಮುಂಗಾರು ಚುರುಕುಗೊಳ್ಳಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಪೂರ್ವ ಸಿದ್ಧತೆ ಕುರಿತು ಸಭೆ ನಡೆಸಿದರು.
ಮುಂಗಾರು ಮಳೆಗೆ ಸಕಲ ಸಿದ್ಧತೆಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದಲ್ಲಿ ಈವರೆಗೆ ಚೆನ್ನಾಗಿ ಮಳೆಯಾಗಿದೆ. ಕರ್ನಾಟಕದಲ್ಲಿ 20 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಹಾಗೂ 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಜೂನ್ 6-7ರ ವೇಳೆಗೆ ಮುಂಗಾರು ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಆಹಾರ ಉತ್ಪಾದನೆ ಕುರಿತು ಪ್ರಸ್ತಾಪ ಮಾಡಿದ ಮುಖ್ಯಮಂತ್ರಿಗಳು, 2020-21ರಲ್ಲಿ ದಾಖಲೆ ಪ್ರಮಾಣದ 153.08 ಲಕ್ಷ ಟನ್ ಗಳಷ್ಟು ಆಹಾರ ಧಾನ್ಯ ಉತ್ಪಾದನೆ ಆಗಿದೆ. ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಳವಾಗಿದೆ. ಈ ವರ್ಷ 135.48 ಲಕ್ಷ ಟನ್ ಆಹಾರ ಉತ್ಪಾದನೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸಾಕಷ್ಟು ಸಂಖ್ಯೆಯಲ್ಲಿದೆ. ಡಿಎಪಿ ಪೂರೈಕೆಯಲ್ಲಿ ಇದ್ದ ಸಮಸ್ಯೆ ಬಗೆಹರಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಡಿಎಪಿ ಗೊಬ್ಬರ ಮತ್ತು ಯೂರಿಯಾ ಗೊಬ್ಬರವನ್ನು ಸಕಾಲದಲ್ಲಿ ಪೂರೈಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ರಾಜ್ಯದಲ್ಲಿ 690 ಕೃಷಿ ಯಂತ್ರ ಧಾರೆ ಕೇಂದ್ರಗಳು ಹಾಗೂ 210 ಗ್ರಾಮ ಮಟ್ಟದ ಕೃಷಿ ಯಂತ್ರೋಪಕರಣಗಳ ಬ್ಯಾಂಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಆಧಾರದಲ್ಲಿ ಕೃಷಿ ಯಂತ್ರೋಪಕರಣ ಒದಗಿಸಲಾಗುತ್ತಿದೆ.
ಕೋವಿಡ್ 2ನೇ ಅಲೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಘೋಷಿಸಲಾದ ಪರಿಹಾರ ವಿತರಣೆ ಈಗಾಗಲೇ ಪ್ರಾರಂಭವಾಗಿದ್ದು, ಇದಕ್ಕಾಗಿ ಬಿಡುಗಡೆಯಾಗಿರುವ 19 ಕೋಟಿ ರೂ. ಗಳಲ್ಲಿ 15.23 ಕೋಟಿ ರೂ. ಗಳನ್ನು 36,327 ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ ಎಂದು ತಿಳಿಸಿದರು.
2020-21ರಲ್ಲಿ ಕೃಷಿ ಸಾಲ ಗುರಿಗಿಂತ 16 ಶೇಕಡಾ ಹೆಚ್ಚು ವಿತರಣೆ ಮಾಡಲಾಗಿದೆ. ಕಳೆದ ವರ್ಷಕ್ಕಿಂತ 3 ಸಾವಿರ ಕೋಟಿ ರೂ. ಹೆಚ್ಚುವರಿ ಗುರಿ ನಿಗದಿಪಡಿಸಿದ್ದು, ಪ್ರಸಕ್ತ ಸಾಲಿನಲ್ಲಿ 21 ಸಾವಿರ ಕೋಟಿ ರೂ. ಸಾಲ ವಿತರಣೆಯ ಗುರಿ ನಿಗದಿಪಡಿಸಲಾಗಿದೆ. ಬೆಂಬಲ ಬೆಲೆಯಲ್ಲಿ ಬೆಳೆ ಖರೀದಿ ಕಳೆದ ವರ್ಷ ದಾಖಲೆ ಪ್ರಮಾಣದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ 1067 ಕೋಟಿ ರೂ. ಪಾವತಿಗೆ ಬಾಕಿ ಇದ್ದು, ಕೂಡಲೇ 250 ಕೋಟಿ ರೂ. ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಮಳೆಗಾಲದಲ್ಲಿ ಪ್ರವಾಹ ಎದುರಿಸಲು ಸಕಲ ಸಿದ್ಧತೆ ನಡೆಸಲಾಗಿದ್ದು, ಪಂಚಾಯಿತಿ ಮಟ್ಟದ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡಗಳು ಸಜ್ಜಾಗಿವೆ. ಎಲ್ಲಾ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕೃಷಿ ಸಚಿವ ಬಿ.ಸಿ. ಪಾಟೀಲ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ತೋಟಗಾರಿಕಾ ಸಚಿವ ಶಂಕರ್, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಮುಂಗಾರಿಗೆ ಕ್ಷಣ ಗಣನೆ ; 135.48 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.