ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿಯಲ್ಲಿ 13 ನೇ ಕಂತಿನ ಮೊತ್ತದ ಸುಮಾರು 16,000 ಕೋಟಿ ರೂ.ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ಬೆಳಗಾವಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಅದೇರೀತಿ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆ.27ರಂದು ಲೋಕಾರ್ಪಣೆ ಮಾಡುವರು. ನಂತರ ಅವರು ಶಿವಮೊಗ್ಗ ನಗರದಲ್ಲಿ ಅನೇಕ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಬೆಳಗಾವಿಯಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ವಿಮಾನ ನಿಲ್ದಾಣದ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡವು ಗಂಟೆಗೆ 300 ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.
ಶಿವಮೊಗ್ಗದಲ್ಲಿ ಎರಡು ರೈಲ್ವೆ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ಹೊಸ ರೈಲು ಮಾರ್ಗ ಮತ್ತು ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಇದರಲ್ಲಿ ಸೇರಿವೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲು ಮಾರ್ಗವನ್ನು 990 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋವನ್ನು 100 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯಿದೆ.
ರಸ್ತೆ ಯೋಜನೆಗಳಿಗೆ ಶಿಲಾನ್ಯಾಸ: ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೈಂದೂರು – ರಾಣಿಬೆನ್ನೂರು ಸಂಪರ್ಕಿಸುವ NH 766C ನಲ್ಲಿ ಶಿಕಾರಿಪುರ ಪಟ್ಟಣಕ್ಕೆ ಹೊಸ ಬೈಪಾಸ್ ರಸ್ತೆ ನಿರ್ಮಾಣ, ಮೇಗರವಳ್ಳಿಯಿಂದ ಆಗುಂಬೆಯವರೆಗೆ NH-169A ಅಗಲೀಕರಣ, NH 169 ರಲ್ಲಿ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.