ಹಮೀರ್‌ಪುರ: ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯ ಮೌದಾಹಾ ಕೊಟ್ವಾಲಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ಏಳು ಮಂದಿಯನ್ನು, ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಮೀರ್‌ಪುರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಸಂಭವಿಸಿದ ಅಪಘಾತವು ತುಂಬಾ ನೋವಿನಿಂದ ಕೂಡಿದೆ. ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಗಾಯಗೊಂಡವರಿಗೆ ಸಹಾಯ ಮಾಡಲು ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತವು ಗಮನ ಹರಿಸಿದೆ’ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.